Karnataka Buget 2025: ಆಯ-ವ್ಯಯದಲ್ಲಿ ಸಿನಿಮಾಕ್ಕೆ ಸಿಕ್ಕಿದ್ದೆಷ್ಟು?

ಬೆಂಗಳೂರು: ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಈ ಬಾರಿಯ ಬಜೆಟ್‌ನಲ್ಲಿ ಚಲನ ಚಿತ್ರ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಸರ್ಕಾರ ಘೋಷಿಸಿದೆ. (Karnataka Buget 2025)

ರಾಜ್ಯದ ಮಲ್ಟಿಪ್ಲೆಕ್ಸ್‌ಗಳೂ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರವನ್ನು ₹200ಕ್ಕೆ ಸೀಮಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಚಲನಚಿತ್ರ ಅಕಾಡೆಮಿಯು ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರ ಸಮುಚ್ಚಯವನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅಂದಾಜು ₹500 ಕೋಟಿ ವೆಚ್ಚದಲ್ಲಿ ಮೈಸೂರಿನಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಚಿತ್ರನಗರಿಯನ್ನು ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸಾಮಾಜಿಕ, ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್-ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು ₹3 ಕೋಟಿ ವೆಚ್ಚದಲ್ಲಿ ಚಲನಚಿತ್ರ ಭಂಡಾರವನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ ಓಟಿಟಿ ವೇದಿಕೆಯನ್ನು ಸೃಜಿಸಲು ಕ್ರಮಕೈಗೊಳ್ಳುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *